ರಾಮನಗರ, ಜುಲೈ 30: ಕಾಂಗ್ರೆಸ್ ಪಕ್ಷದ 15 ಮಂದಿ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೊಸ ಬಾಂಬ್ ಸಿಡಿಸಿದರು.
ನಳೀನ್ ಕುಮಾರ್ ಕಟೀಲ್ ಅವರು ರಾಮನಗರದ ಜಯಪುರ ಬಳಿಯ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಮುಂಖಂಡರ ಸಭೆಯ ನಂತರ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ಕಳೆದ 15 ದಿನಗಳ ಹಿಂದೆ ಕಾಂಗ್ರೆಸ್ ಸೇರಲು ನನ್ನ ಬಳಿಗೆ ಸಿ.ಪಿ ಯೋಗೇಶ್ವರ್ ಬಂದಿದ್ದರು ಎಂದು ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, 15 ಕಾಂಗ್ರೆಸ್ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಎಂದು ಡಿ.ಕೆ ಶಿವಕುಮಾರ್ ಗೆ ಟಾಂಗ್ ಕೊಟ್ಟರು.
ಇನ್ನು ನೂತನ ಮೇಲ್ಮನೆ ಸದಸ್ಯ ಸಿ.ಪಿ ಯೋಗೇಶ್ವರ್ ನೀಡಿದ್ದ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ ಎಂಬ ಹೇಳಿಕೆಗೆ ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಂದ ಬೆಂಬಲ ವ್ಯಕ್ತವಾಗಲಿಲ್ಲ. ಅದರ ಬಗ್ಗೆ ಹೆಚ್ಚು ಉಲ್ಲೇಖ ಮಾಡುವುದಿಲ್ಲ ಎಂದು ಕಟೀಲ್ ಚುಟುಕಾಗಿ ಉತ್ತರಿಸಿ ನಿರಾಸಕ್ತಿ ವ್ಯಕ್ತಪಡಿಸಿದರು.
ರಾಮನಗರ ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಗೊಂದಲ್ಲವಿಲ್ಲ, ಕಾರ್ಯಕರ್ತರು ಕೆಲ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ ಅವರ ಭಾವನೆಗಳಿಗೆ ನಾನು ಸ್ಪಂದಿಸುತ್ತೇನೆ, ಜಿಲ್ಲಾ ಬಿಜೆಪಿಯಲ್ಲಿ ಯಾವುದೇ ಸಮಸ್ಯೆಯಿಲ್ಲ ಎಂದು ನಳೀನ್ ಕುಮಾರ್ ಕಟೀಲ್ ಸ್ಪಷ್ಟಪಡಿಸಿದರು.