ಕೆಲಸದ ಆಮಿಷವೊಡ್ಡಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಸಚಿವ ರಮೇಶ್ ಜಾರಕಿಹೊಳಿ ರಾಜೀನಾಮೆಗೆ ವಿಪಕ್ಷ ಮಾತ್ರವಲ್ಲದೆ ಸ್ವಪಕ್ಷೀಯರಿಂದಲೇ ಒತ್ತಡ ಹೆಚ್ಚಾಗುತ್ತಿದೆ. ಇದರ ಮಧ್ಯೆ ಪ್ರಕರಣದ ಗಂಭೀರತೆಯನ್ನು ಅರಿತಿರುವ ಬಿಜೆಪಿ ಹೈಕಮಾಂಡ್ ಸಹ ಮಧ್ಯೆ ಪ್ರವೇಶಿಸಿದೆ ಎನ್ನಲಾಗಿದ್ದು, ರಮೇಶ್ ಜಾರಕಿಹೊಳಿ ಅವರಿಂದ ರಾಜೀನಾಮೆ ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚಿಸಿದೆ ಎನ್ನಲಾಗಿದೆ.
ಅದರಲ್ಲೂ ನಾಲ್ಕು ರಾಜ್ಯಗಳು ಹಾಗೂ ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭಾ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಬಹಿರಂಗವಾಗಿರುವ ಈ ಪ್ರಕರಣ ಬಿಜೆಪಿ ಹೈಕಮಾಂಡ್ ನ್ನು ತೀವ್ರ ಮುಜುಗರಕ್ಕೆ ಸಿಲುಕಿಸಿದ್ದು, ಹೀಗಾಗಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪ್ರತಿಪಕ್ಷಗಳ ಬಾಯಿಗೆ ಆಹಾರವಾಗಬಾರದೆಂಬ ಕಾರಣಕ್ಕೆ ತಕ್ಷಣವೇ ರಮೇಶ್ ಜಾರಕಿಹೊಳಿ ಅವರ ರಾಜೀನಾಮೆಯನ್ನು ಪಡೆದುಕೊಳ್ಳುವಂತೆ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸೂಚನೆ ರವಾನಿಸಲಾಗಿದೆ ಎಂದು ಹೇಳಲಾಗಿದೆ.
ಈ ಕಾರಣಕ್ಕೆ ಪ್ರಸ್ತುತ ಅಜ್ಞಾತ ಸ್ಥಳದಲ್ಲಿ ಇರುವ ಸಚಿವ ರಮೇಶ್ ಜಾರಕಿಹೊಳಿ ಅಲ್ಲಿಂದಲೇ ತಮ್ಮ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ರವಾನಿಸಲಿದ್ದಾರೆ ಎನ್ನಲಾಗಿದ್ದು, ತಕ್ಷಣವೇ ಅಂಗೀಕಾರ ಮಾಡುವಂತೆ ಯಡಿಯೂರಪ್ಪನವರು ರಾಜ್ಯಪಾಲರಿಗೆ ಶಿಫಾರಸು ಮಾಡುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಈ ಪ್ರಕರಣದಿಂದ ರಾಜ್ಯ ಸರ್ಕಾರ ಹಾಗೂ ಬಿಜೆಪಿ ತೀವ್ರ ಮುಜುಗರಕ್ಕೆ ಸಿಲುಕಿದ್ದು, ಮುಂದಿನ ದಿನಗಳಲ್ಲಿ ರಾಜಕೀಯ ವಾಕ್ಸಮರಕ್ಕೆ ಕಾರಣವಾಗುವ ಸಾಧ್ಯತೆ ಇದೆ.
Comments
Post a Comment