ಹಾಸನದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಕನಿಷ್ಠ ಐದು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಶ್ರಮಿಸಲಾಗುವುದು ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು. ಹಾಸನಾಂಬೆ ದರ್ಶನ ಬಳಿಕ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯ ಐದು ಕ್ಷೇತ್ರಗಳಲ್ಲಿ ಶಾಸಕರನ್ನು ಗೆಲ್ಲಿಸಲು ಶಾಸಕ ಪ್ರೀತಂ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಪ್ರೀತಂ ಅವರಿಗೆ ಒಳ್ಳೆಯ ಸ್ಥಾನಮಾನ ಸಿಗಲಿದೆ ಎಂಬ ವಿಶ್ವಾಸವಿದೆ ಎಂದರು.
ನಾನು ಬಿಜೆಪಿ ರಾಜ್ಯ ಉಪಾಧ್ಯಕ್ಷನಾಗಿ ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದು, ಮುಂದಿನ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬುದನ್ನು ಬಗ್ಗೆ ಪಕ್ಷದ ಹಿರಿಯರು ನಿರ್ಧಾರ ಮಾಡಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ದೊಡ್ಡದಾಗಿ ಬೆಳೆದಿರುವುದಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಕೊಡುಗೆ ಅಪಾರ. ಮುಖ್ಯಮಂತ್ರಿ ಸ್ಥಾನದಿಂದ ಇಳಿದ ನಂತರ ಇಡೀ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದ್ದಾರೆ' ಎಂದು ಹೇಳಿದರು.
ಹಾನಗಲ್ ವಿಧಾನಸಭಾ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ. ಸಿಂದಗಿ ಮತ್ತು ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳ ಗೆಲುವಿಗಾಗಿ ಸಿ.ಎಂ ಜೊತೆ ಬಿಜೆಪಿ ಮುಖಂಡರು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಹಾನಗಲ್‌ನಲ್ಲಿ ಸೋತ ಮಾತ್ರಕ್ಕೆ ಸಿ.ಎಂ ವರ್ಚಸ್ಸಿಗೆ ಧಕ್ಕೆ ಆಗಿದೆ ಎಂಬುದುದನ್ನು ಯಾರೂ ಒಪ್ಪುವುದಿಲ್ಲ ಎಂದು ತಿಳಿಸಿದರು.
ಸೋಲಿನ ಜವಾಬ್ದಾರಿಯನ್ನು ಸಾಮೂಹಿಕವಾಗಿ ತೆಗೆದುಕೊಂಡಿದ್ದೇವೆ. ಒಂದು ಉಪ ಚುನಾವಣೆಯಲ್ಲಿ ಹಿನ್ನೆಡೆಯಾದ ಕಾರಣ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರ ಬದಲಾವಣೆ ಆಗುತ್ತದೆ ಎಂಬ ಮಾತುಗಳು ಸರಿಯಾಗಿಲ್ಲ' ಎಂದರು.
ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಮತ್ತು ಬಿಜೆಪಿಗೆ ಸೋಲು ಆಗಿರುವುದಕ್ಕೆ ಅನೇಕ ಕಾರಣಗಳಿವೆ. ಈ ಬಗ್ಗೆ ಎಲ್ಲರೂ ಕುಳಿತು ಒಟ್ಟಿಗೆ ಚರ್ಚೆ ಮಾಡುತ್ತೇವೆ. ಹಿಂದೆ ಸಿದ್ದರಾಮಯ್ಯ ಸಿ.ಎಂ ಆಗಿದ್ದಾಗ ಗುಂಡ್ಲುಪೇಟೆ, ನಂಜನಗೂಡಿನಲ್ಲಿ ಜಯಭೇರಿ ಬಾರಿಸಿದ್ದರು. ನಂತರದಲ್ಲಿ ಸಾರ್ವತ್ರಿಕ ಚುನಾವಣೆಯಲ್ಲಿ ಜನರು ಯಾವ ರೀತಿ ತೀರ್ಪು ಕೊಟ್ಟರು ಎಂಬುದನ್ನು ನೋಡಿದ್ದೇವೆ. ಹಾಗಾಗಿ ಈ ಎರಡು ಚುನಾವಣೆಯನ್ನು ಮುಂದಿನ ಚುನಾವಣೆಗೆ ದಿಕ್ಸೂಚಿ ಎಂದು ಹೇಳಲಾಗುವುದಿಲ್ಲ. ಕಾಂಗ್ರೆಸ್ ಪಕ್ಷದ ಜಯವೆಂದು ಒಪ್ಪಿಕೊಳ್ಳುವುದಿಲ್ಲ' ಎಂದು ನುಡಿದರು. ಶಾಸಕ ಪ್ರೀತಂ ಜೆ. ಗೌಡ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್, ಮುಖಂಡರಾದ ಶೋಭನ್ ಬಾಬು, ಚನ್ನಕೆಶವ, ಎಚ್.ಎನ್. ನಾಗೇಶ್, ವೇಣುಗೋಪಾಲ್ ಇದ್ದರು.
Comments
Post a Comment